ಬಂಟ್ವಾಳ: ಅವಿಭಜಿತ ದ.ಕ .ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಎಬಿವಿಪಿ ನಿಯೋಗ ಡಿಜಿಪಿ ಪ್ರವಿಣ್ ಸೂದ್ ಹಾಗೂ ಮಂಗಳೂರು ನಗರ ಕಮಿಷನರ್ ವಿಕಾಸ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. 
ಕರ್ನಾಟಕದಲ್ಲಿ ಬೆಂಗಳೂರನ್ನು ಹೊರೆತುಪಡಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕ ಕೇಂದ್ರವಾಗಿದ್ದು, ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿಷ್ಠಿತ ಶಿಕ್ಷಣ ಕೇಂದ್ರಗಳಿವೆ. ಹೊರ ರಾಜ್ಯ ಮತ್ತು ಹೊರ ದೇಶದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಪಡೆಯುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ದೊಡ್ಡ ಮಟ್ಟದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದ್ದು, ಪೋಲಿಸ್ ಇಲಾಖೆಯ ಅಪರಾಧ ವಿಭಾಗದ ವರದಿಗಳ ಪ್ರಕಾರ ಕಳೆದ ವರ್ಷಗಳಲ್ಲಿ ಪತ್ತೆಯಾಗಿರುವ ಗಾಂಜಾ ಪ್ರಕರಣಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಜಿಲ್ಲೆಯ ಪೋಲಿಸ್ ಇಲಾಖೆ ೨-೩ ದಿನಗಳಿಂದ ನಗರ ಮತ್ತು ಜಿಲ್ಲೆಯಾದ್ಯಂತ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿದ್ದು, ಪೋಲಿಸರಿಗೆ ಇನ್ನಷ್ಟು ದೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಕೆಲಸಗಳು ಆಗಬೇಕು ಮತ್ತು ಯಾವುದೇ ರಾಜಕೀಯ ಪ್ರಭಾವಗಳಿಗೆ ಒಳಗಾಗದೇ ನಿಷ್ಪಕ್ಷಪಾತವಾದ ತನಿಖೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ