ಬಂಟ್ವಾಳ: ಡಾ. ಬಿ. ಆರ್ ಅಂಬೇಡ್ಕರ್ ಅವರ ಜೀವನ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಕೊಂಡಾಗ ಅಂಬೇಡ್ಕರ್ ಜಯಂತಿ ಆಚರಣೆ ಅರ್ಥಪೂರ್ಣವಾಗುತ್ತದೆ. ಶೋಷಿತ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದ ಅಂಬೇಡ್ಕರ್ ಅವರ ಹೆಸರು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಬಡಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಬಂಟ್ವಾಳ ಪುರಸಭೆಯೂ ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಶ್ರಮ ವಹಿಸುತ್ತಿದೆ ಎಂದು ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ ಹೇಳಿದರು. ತಾಲೂಕಾಡಳಿತ, ತಾಲೂಕು ಪಂಚಾಯಿತಿ ಬಂಟ್ವಾಳ, ಸಮಾಜಕಲ್ಯಾಣ ಇಲಾಖೆ ಹಾಗೂ ಬಂಟ್ವಾಳ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರು ವಿವಿಯ ಸಂಶೋಧನಾ ಪ್ರಶಿಕ್ಷಣಾರ್ಥಿ ರುಕ್ಮಯ ಎಂ.ಕಕ್ಯಪದವು ಪ್ರಧಾನ ಭಾಷಣ ಮಾಡಿ ಸಂವಿಧಾನವನ್ನು ಅರ್ಥೈಸಿಕೊಂಡು ಸರಿಯಾಗಿ ಬಳಕೆ ಮಾಡಿಕೊಂಡಾಗ ಈ ದೇಶದ ಸ್ಥಿತಿಗತಿಯನ್ನು ಬದಲಾವಣೆ ಮಾಡಲು ಸಾದ್ಯವಿದೆ. ಅಸ್ಪ್ರಶ್ಯತೆ ಎಂಬುದು ರಾಜಕೀಯ ಸಮಸ್ಯೆಯೇ ಹೊರತು ಸಾಮಾಜಿಕ ಸಮಸ್ಯೆ ಅಲ್ಲ. ಕೆಲವು ವಿಚಾರಗಳಲ್ಲಿ ದಲಿತರೇ ದಲಿತರಿಗೆ ಶತ್ರುಗಳು ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ದೇಶಕ ಕೊರಗಪ್ಪ ಸೀಮಗಾರಕೋಡಿ ಅವರನ್ನು ಸನ್ಮಾನಿಸಲಾಯಿತು.
ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ್ ಅರ್ಬಿಗುಡ್ಡೆ, ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ಪುರಸಭಾ ಮುಖ್ಯಾಧಿಕಾರಿ ಸುಧಾಕರ ಭಟ್ ಉಪಸ್ಥಿತರಿದ್ದರು.
ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಸಮಾಜಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ವಿನಯ ಕುಮಾರಿ ವಂದಿಸಿದರು. ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.
