ಬಂಟ್ವಾಳ:ರಾಜ್ಯದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಸಿಇಟಿ ಸಹಿತ ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಮಾತ್ರವಲ್ಲದೆ ಹೆಚ್ಚುವರಿ ಸೌಲಭ್ಯಗಳನ್ನು ನೀಡುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೂಡಾ ಈ ನಿಟ್ಟಿನಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ವೇಳೆ ಜಿಲ್ಲಾ ವ್ಯಾಪ್ತಿಯ ಒಟ್ಟು 930 ಮಂದಿ ವಿದ್ಯಾರ್ಥಿಗಳಿಗೆ ಮಂಜೂರಾದ ಒಟ್ಟು ರೂ 54,99,600 ಮೊತ್ತದ ಚೆಕ್ಕನ್ನು ಸಚಿವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು.
ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮಂಜುನಾಥ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುಜ್ಞಾನ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 4,015 ಮಂದಿ ವಿದ್ಯಾರ್ಥಿಗಳಿಗೆ ಒಟ್ಟು ರೂ 4ಕೋಟಿ 27, 08, 800 ಮೊತ್ತ ವಿತರಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಒಟ್ಟು 8,810 ಮಂದಿ ವಿದ್ಯಾರ್ಥಿಗಳ ಪೈಕಿ ಒಟ್ಟು ರೂ 5ಕೋಟಿ 3,21,200 ಮೊತ್ತ ವಿತರಿಸಲಾಗುತ್ತಿದೆ ಎಂದರು.
ಬಂಟ್ವಾಳ ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಮಂಗಳೂರು ಉಪ ವಿಭಾಗಾಧಿಕಾರಿ ಡಾ. ಡಿ.ಆರ್. ಅಶೋಕ್ ಶುಭ ಹಾರೈಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ಬಂಟ್ವಾಳ ಯೋಜನಾಧಿಕಾರಿ ಸುನಿತಾ ನಾಯಕ್, ಮಂಗಳೂರು ಯೋಜನಾಧಿಕಾರಿ ರಾಘವ ಎಂ., ಕೇಂದ್ರ ಒಕ್ಕೂಟ ಅಧ್ಯಕ್ಷ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಯೋಜನಾ ನಿರ್ದೇಶಕ ಸೀತಾರಾಮ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕಾನೂನು ವಿಭಾಗ ಸಲಹೆಗಾರ ಸುಧೀರ್ ವಂದಿಸಿದರು. ನವೀನ್ ಮತ್ತು ಮಮತಾ ಕಾರ್ಯಕ್ರಮ ನಿರೂಪಿಸಿದರು.