ಮಂಗಳೂರು: ಮಂಗಳೂರು ಮೀನುಗಾರಿಕೆ ಬಂದರಿನ ಮೂರನೇ ಹಂತದ ವಿಸ್ತರಣೆ ಕಾಮಗಾರಿಗೆ ದಿಲ್ಲಿಯ ಹಸಿರು ಪೀಠ ನೀಡಿರುವ ತಡೆಯಾಜ್ಞೆ ತೆರವಿಗೆ ಪ್ರಯತ್ನ ನಡೆಸಲಾಗುವುದು ಎಂದು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಕುಳಾಯಿಯಲ್ಲಿ 151.50 ಕೋಟಿ ರೂ. ವೆಚ್ಚದಲ್ಲಿ 680 ಮೀ. ಉದ್ದದ ಮೀನುಗಾರಿಕೆ ಜೆಟ್ಟಿ ನಿರ್ಮಾಣಕ್ಕೆ ಅನುಮೋದನೆ ನೀಡಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2013-14ನೇ ಸಾಲಿನಲ್ಲಿ 4.23 ಕೋಟಿ ರೂ. ವೆಚ್ಚದಲ್ಲಿ 17.14 ಕಿ.ಮೀ. ಉದ್ದದ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಬಳಿಯಿಂದ ಮೂರನೇ ಹಂತದ ಬಂದರಿಗೆ ಸಂಪರ್ಕ ಕಲ್ಪಿಸಲು 250 ಮೀ. ಉದ್ದದ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಲು ಅಕಾರಿಗಳಿಗೆ ಸೂಚಿಸಿದ ಸಚಿವರು, ಶಾಸಕರ ಮೂಲಕ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು

