ರಾಜಕೀಯ ಪ್ರೇರಿತ ಪ್ರತಿಭಟನೆಗೆ ಮಕ್ಕಳ ಬಳಕೆ ಸಲ್ಲದು: ಸಚಿವ ರೈ
ಬಂಟಾಳ: ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಕೆಲವೊಮ್ಮೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮತ್ತಿತರ ತಾತ್ಕಾಲಿಕ ಸಮಸ್ಯೆ ಉಂಟಾಗುವ ಸಂದರ್ಭದಲ್ಲಿ ರಾಜಕೀಯ ಪ್ರೇರಿತವಾಗಿ ನಡೆಯುವ ಪ್ರತಿಭಟನೆಯಲ್ಲಿ ಮುಗ್ಧ ಮನಸ್ಸಿನ ಮಕ್ಕಳನ್ನು ಎಳೆದು ತರುವುದು ಸಲ್ಲದು. ಮಾತ್ರವಲ್ಲದೆ ಅವರಲ್ಲಿ ಬಾಲ್ಯದಿಂದಲೇ ಮತೀಯವಾದಕ್ಕೆ ಬದಲಾಗಿ ಪರಸ್ಪರ ಪರಸ್ಪರ ಪ್ರೀತಿ ಮತ್ತು ಸೌಹಾರ್ದತೆ ಬೆಳೆಸುವ ಮಹತ್ತರ ಜವಾಬ್ದಾರಿ ಶಿಕ್ಷಕರು ಮತ್ತು ಮಕ್ಕಳ ಪೋಷಕರು ಸಹಿತ ಇಡೀ ಸಮಾಜದ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಮಾನಾಥ ರೈ ಹೇಳಿದ್ದಾರೆ.

ತಾಲ್ಲೂಕಿನ ಕಾವಳಪಡೂರು ಗ್ರಾಮದ ವಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಮತ್ತು ಕಲೋತ್ಸವ-2016 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಐ.ಶ್ರೀವಿದ್ಯಾ, ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಬೂಡಾ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್, ತಾಲ್ಲೂಕು ಸಂಘದ ಅಧ್ಯಕ್ಷ ರಘು, ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸ್ಟ್ಯಾನಿ ತಾವ್ರೋ, ತಾಲ್ಲೂಕು ಸಂಘದ ಅಧ್ಯಕ್ಷ ಜೋಯೆಲ್ ಲೋಬೊ, ಮಾಜಿ ಅಧ್ಯಕ್ಷ ತಾರೇಶ್, ಗ್ರಾಮ ಪಂಚಾಯಿತಿ ಸದಸ್ಯ ವೀರೇಂದ್ರ ಅಮೀನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ, ಜಿಲ್ಲಾ ನೋಡಲ್ ಅಧಿಕಾರಿ ರಾಧಾಕೃಷ್ಣ ಭಟ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯನ್ ಮಿರಾಂದ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯಕ್ ರಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಸಿ., ಕಾಲೇಜಿನ ಪ್ರಾಂಶುಪಾಲೆ ರೇಖಾ, ಮುಖ್ಯಶಿಕ್ಷಕ ಶೇಖ್ ಆದಂ ಸಾಹೇಬ್ ಮತ್ತಿತರರು ಇದ್ದರು.
ಇದೇ ವೇಳೆ ಸ್ಥಳೀಯ ದಾನಿ, ಉದ್ಯಮಿ ಅಬ್ದುಲ್ ರಶೀದ್ ಬಾಂಬಿಲ ಮತ್ತು ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪಿ.ಜಿನರಾಜ ಅರಿಗ ಇವರನ್ನು ಸಚಿವರು ಸನ್ಮಾನಿಸಿದರು.
ಇಲಾಖೆ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ ಸ್ವಾಗತಿಸಿ, ಸಮನ್ವಯ ಅಧಿಕಾರಿ ರಾಜೇಶ್ ಜಿ. ವಂದಿಸಿದರು. ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.