ಬಂಟ್ವಾಳ: ಜನಸಂಖ್ಯಾ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ಎಲ್ಲರಿಗೂ ಶಿಕ್ಷಣ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದಾಗ ದೇಶದ ಅಭಿವೃದ್ದಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಬಿ.ಸಿ.ರೋಡು ಲಯನ್ಸ್ ಸೇವಾ ಮಂದಿರದಲ್ಲಿ ಶುಕ್ರವಾರ ನಡೆದ ತಾಲೂಕು ವಿಶ್ವ ಜನಸಂಖ್ಯಾ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದರು.ಪ್ರತೀ ಹಂತದಲ್ಲಿ ಭ್ರಷ್ಟಾಚಾರ ಮುಕ್ತ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದರು.ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿ, ಯುವ ಜನತೆ ತಮ್ಮ ಜವಾಬ್ದಾರಿಯನ್ನು ಅರ್ಥೈಸಿಕೊಂಡು ಕುಟುಂಬದ ಅಭಿವೃದ್ಧಿ, ತನ್ಮೂಲಕ ದೇಶದ ಅಭಿವೃದ್ಧಿ ಸಾಧಿಸಲು ಜನಸಂಖ್ಯಾ ಸ್ಥಿರತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದರು.ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಮೂಲಭೂತ ಸೌಲಭ್ಯ ಒದಗಿಸುವ ಜವಾಬ್ದಾರಿಯನ್ನು ಅರ್ಥಮಾಡಿಕೊಂಡು ಕುಟುಂಬದ ಗಾತ್ರವನ್ನು ನಿರ್ಧರಿಸುವುದು ಅತೀ ಅಗತ್ಯ ಎಂದರು.img-20160909-wa0089

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಲ್ಲಡ್ಕ ಬಾಳ್ತಿಲ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವೇಶ್ವರ ವಿ.ಕೆ ಯವರು ಮಾಹಿತಿ ನೀಡಿ, ಮಿತಿ ಮೀರಿದ ಜನಸಂಖ್ಯೆಯಿಂದ ದೇಶದ ಅಭಿವೃದ್ಧಿಗೆ ಉಂಟಾಗುವ ಹಿನ್ನಡೆಯನ್ನು ಅಂಕಿ ಅಂಶಗಳೊಂದಿಗೆ ವಿವರಿಸಿದರು. ಜನಸಂಖ್ಯೆ ದೇಶದ ಸಂಪನ್ಮೂಲವಾಗಬೇಕಾದರೆ ಆರೋಗ್ಯ ಪೂರ್ಣ ಮಕ್ಕಳನ್ನು ಪಡೆಯುವ ಜಾಗೃತಿ ಎಲ್ಲ ಯುವಜನರಲ್ಲಿ ಉಂಟಾಗಬೇಕೆಂದು ಹೇಳಿದರು. ಉತ್ತಮ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿರುವ ಯುವಕರು ತಮ್ಮ ಭವಿಷ್ಯತ್ತಿನ ಬಗ್ಗೆ ಸರಿಯಾದ ಚಿಂತನೆಯೊಂದಿಗೆ ಯೋಜನಾಬದ್ಧವಾದ ಬದುಕನ್ನು ರೂಪಿಸಬೇಕೆಂದರು.ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಂಖ್ಯಾ ದಿನಾಚರಣೆಯ ಮೂಲಕ ಸಮಾಜದಲ್ಲಿ ಮಿತಿಮೀರಿದ ಜನಸಂಖ್ಯೆಯಿಂದುಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಉಪಯುಕ್ತ ಹಾಗೆಯೇ ಪರಿಣಾಮಕಾರಿ ಕಾರ್ಯಕ್ರಮವೆಂದರು.ಬಂಟ್ವಾಳ ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ ಶುಭಹಾರೈಸಿದರು.ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಸ್ವಾಗತಿಸಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಪ್ರಾಸ್ತವಿಕ ಮಾತುಗಳನ್ನಾಡಿದರು. ಹಿರಿಯ ಆರೋಗ್ಯ ಸಹಾಯಕ ಎಫ್.ಎನ್.ಧವಳೆ ವಂದಿಸಿದರು. ಮಂಗಳೂರಿನ ಮಲೇರಿಯ ಪರಿವೀಕ್ಷಕ ಜಯರಾಮ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಬಂಟ್ವಾಳ ಸ.ಪ.ಪೂ. ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು, ತಾಲೂಕಿನ ಹಿರಿಯ,ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಸಿಬ್ಬಂಧಿ ಭಾಗವಹಿಸಿದರು. 

By suddi9

Leave a Reply

Your email address will not be published. Required fields are marked *