ಬಂಟ್ವಾಳ: ಇಂಧನ, ಅಡುಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಗಣನೀಯವಾಗಿ ಕುಸಿದಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರುತ್ತಲೇ ಇದೆ. ಜೊತೆಗೆ ಜೀವನಾವಶ್ಯಕ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದರು.
ಕೇಂದ್ರದ ಬಿಜೆಪಿ ಸರಕಾರ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಬೇಕಾದ ಬದಲು ಬೆಲೆ ಏರಿಕೆ ಹಾಗೂ ಸೇವಾ ತೆರಿಗೆಯನ್ನು ಶೇ. 15ರಷ್ಟು ಏರಿಸಿ ಎಲ್ಲಾ ವಸ್ತುಗಳ ಬೆಲೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ ಎಂದು ಟೀಕಿಸಿದರು.

congress protest photo
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದರೂ ಹಿಂಭಾಗಿಲ ಮೂಲಕ ಬಿಜೆಪಿ ಅಧಿಕಾರವನ್ನು ಪಡೆದಿರುವುದು ಪ್ರಜಾಪ್ರಭೂತ್ವದ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗೆ ಅನುಕೂಲಕರವಾದ ಜನಪ್ರೀಯ ಬಜೆಟನ್ನು ಮಂಡಿಸಿದ್ದು ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಸಿದ್ದರಾಮಯ್ಯರವರೇ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಜಿಪಂ ಸದಸ್ಯರಾದ ಮಮತ ಗಟ್ಟಿ, ಮಂಜುಳಾ ಮಾವೆ, ದ.ಕ. ಜಿಲ್ಲಾ ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಪದ್ಮನಾಭ ನರಿಂಗಾನ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಮೊದಲಾದವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ತಾಪಂ ಸದಸ್ಯ ಉಸ್ಮಾನ್ ಕರೋಪಾಡಿ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಜಿಲ್ಲಾ ಸೇವಾ ದಳದ ಸದಸ್ಯ ವೆಂಕಪ್ಪ ಪೂಜಾರಿ, ದ.ಕ. ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮುಹಮ್ಮದ್ ನಂದರಬೆಟ್ಟು ಸೇರಿದಂತೆ ತಾಪಂ, ಬಂಟ್ವಾಳ ಪುರಸಭೆ, ತಾಲೂಕಿನ ವಿವಿಧ ಗ್ರಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

By suddi9

Leave a Reply

Your email address will not be published. Required fields are marked *