ಮಂಗಳೂರು:ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಾಧಿಕಾರಕ್ಕೆ ಬರುತ್ತಿರುವ ದೂರುಗಳ ಸಂಖ್ಯೆ ಬಹಳಷ್ಟು ಕಡಿಮೆಯಾಗಿದೆ. ಪ್ರಧಿಕಾರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ರಾಜ್ಯ ಪ್ರವಾಸ ಆರಂಭಿಸಲಾಗಿದೆ. ಈಗಾಗಲೇ 8 ಜಿಲ್ಲೆಗಳ ಪ್ರವಾಸ ಮುಗಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷ, ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾ. ಎ. ಎಸ್. ಪಾಚ್ಚಾಪುರೆ ಹೇಳಿದರು.
ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯ ಕಟ್ಟಡದ ಸಭಾಂಗಣದಲ್ಲಿ ಬುಧವಾರ ನಡೆದ ಪೊಲೀಸ್ ದೂರುಗಳ ಪ್ರಾಧಿಕಾರ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸ್ ದೂರುಗಳ ಪ್ರಧೀಕಾರವು ಪೊಲೀಸರ ಕಾರ್ಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಲು ಪೂರಕವಾಗಿದೆ. ದೂರುಗಳನ್ನು ಪ್ರಧೀಕಾರವು ಸ್ವತಂತ್ರವಾಗಿ ವಿಚಾರಣೆ ನಡೆಸುತ್ತದೆ. ಆದರೆ ಯಾವುದೇ ಕ್ರಮ ಕೈಗೊಳ್ಳುವ ಅಧಿಕಾರ ಇಲ್ಲ. ಪ್ರಾಧೀಕಾರವು ದೂರುಗಳನ್ನು ವಿಚಾರಿಸಿ ವರದಿಯನ್ನು ಸರಕಾರಕ್ಕೆ ಕಳುಹಿಸಿಕೊಡುತ್ತದೆ. ಪ್ರಧೀಕಾರಕ್ಕೆ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಮಟ್ಟದಲ್ಲಿಯೂ ನಿವೃತ್ತ ನ್ಯಾಯಾಧೀಶರನ್ನು ಪ್ರಾಧೀಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ಈ ಬಗ್ಗೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದರು.
ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜಯ್ ಸಹಾಯ್ ಮಾತನಾಡಿ, 3 ವರ್ಷಗಳಿಂದ ದೂರುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಪ್ರಾಧಿಕಾರಕ್ಕೆ ಹೊಸ ಆಯಾಮ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದರು.
ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ. ಎಸ್. ಬೀಳಗಿ, ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಎಂ. ಆರ್, ಕಾಂಬ್ಳೆ, ಅಪರ ಜಿಲ್ಲಾಧಿಕಾರಿ ಕುಮಾರ್, ಎಸ್ಪಿ ಭೂಷಣ್ ಗುಲಾಬ್ ರಾವ್ ಬೋರಸೆ, ಡಿಸಿಸಿ ಡಾ. ಸಂಜೀವ ಪಾಟೀಲ್, ಮಂಗಳೂರು ವಕೀಲರ ಸಂಘದ ಉಪಾಧ್ಯಕೆ ಪುಷ್ಪಲತಾ ಇದ್ದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶ ಮಲ್ಲಣ್ಣ ಗೌಡ ಸ್ವಾಗತಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ವಂದಿಸಿದರು. ವಕೀಲೆ ಅರುಣಾ ಬಿ. ಪಿ. ನಿರೂಪಿಸಿದರು.