ಕುಪ್ಪೆಪದವು : ಇಲ್ಲಿಗೆ ಸಮೀಪದ ಮುತ್ತೂರು ಮಾರ್ಗದಂಗಡಿ ಬಳಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಜಪೆ ಪೊಲೀಸರು ದಾಳಿ ನಡೆಸಿ 6 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಮುತ್ತೂರು ಮಾರ್ಗದಂಗಡಿಯ ಪಲ್ಗುಣಿ ನದಿಯಲ್ಲಿ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಬಜಪೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ. ನಾಗರಾಜು ಮತ್ತವರ ತಂಡ ದಾಳಿ ನಡೆಸಿತು.
ಈ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆ ಸಾಗಾಟಕ್ಕೆ ಬಳಸುತ್ತಿದ್ದ 6 ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಕ್ರಮ ದಂಧೆಕೋರರು ದಾಳಿಯ ಸಂದರ್ಭದಲ್ಲಿ ಲಾರಿಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದವರನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಹರಿಯುತ್ತಿರುವ ಪಲ್ಗುಣಿ ನದಿಯಲ್ಲಿ ನಿರಂತರವಾಗಿ ಅದರಲ್ಲೂ ರಾತ್ರಿ ಸಮಯದಲ್ಲಿ ಹಿಟಾಚಿಗಳ ಮೂಲಕ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಲಾಗಿತ್ತು.