ಬಂಟ್ವಾಳ: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿಗೊಂಡು ನಂತರ ತೆರವಾದ ಹುದ್ದೆಗಳಿಗೆ ಆಯ್ಕೆ ಪಟ್ಟಿಯಲ್ಲಿನ ಇತರ ಅಭ್ಯರ್ಥಿಗಳನ್ನು ಪರಿಗಣಿಸುವಂತೆ ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ್ ಪ್ರಭು ಅವರು ಮುಖ್ಯಮಂತ್ರಿ ಅವರನ್ನು ಮನವಿ ಮೂಲಕ ಒತ್ತಾಯಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪರೀಕ್ಷೆ ನಡೆಸಿ ಸೂಕ್ತ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಮಾಡಿ ಕಾಲೇಜು ಶಿಕ್ಷಣ ಇಲಾಖೆಗೆ ನೀಡಲಾಗಿದ್ದು ಅದರಂತೆ ಆಗಸ್ಟ್ ಹಾಗೂ ಸೆಪ್ಟಂಬರ್ 2017ರಲ್ಲಿ ನೇಮಕಾತಿ ಆದೇಶ ನೀಡಿ ಸಂಬಂಧಪಟ್ಟವರು ಈಗಾಗಲೇ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಇದೇ ಸಮಯದಲ್ಲಿ ಕರ್ನಾಟಕ ಲೋಕ ಸೇವಾ ಆಯೋಗವು 2014ನೇ ವರ್ಷದ ಗಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ತಯಾರಿಸಿ ಇಲಾಖಾವಾರು ಹುದ್ದೆಗಳ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಇಲಾಖೆಗೆ ಕಳುಹಿಸಿಕೊಟ್ಟಿದ್ದು ಅದರಂತೆ ಇಲಾಖೆಗಳು ಈ ನೇಮಕಾತಿ ಆದೇಶ ಹೊರಡಿಸಿವೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಎರಡೂ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಯಲ್ಲಿ ಕೆಲವು ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ. ಮೊದಲಾಗಿ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ಹಾಜರಾದ ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕ ಹುದ್ದೆ ತೊರೆದು ಕೆ.ಪಿ.ಎಸ್.ಸಿ.ನ ಗಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಹಾಜರಾಗುತ್ತಿದ್ದಾರೆ. ಇದರಿಂದಾಗಿ ರಾಜ್ಯದ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಾಗಲಿದ್ದು ಪುನಃ ಆಯ್ಕೆ ಪ್ರಕ್ರಿಯೆ ವಿಳಂಬವಾಗುವುದರಿಂದ ಸಂಬಂಧಿಸಿದ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು,

ಕಾಲೇಜಿನ ಹಿತದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈಗಾಗಲೇ ಅನುಮೊದನೆಗೊಂಡ ಪ್ರಸ್ತುತ ಆಯ್ಕೆ ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

By suddi9

Leave a Reply

Your email address will not be published. Required fields are marked *