ಬಂಟ್ವಾಳ:ತಾಲ್ಲೂಕಿನ ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಯೊಬ್ಬರು ಹಠಾತ್ ಕುಸಿದು ಬಿದ್ದು ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತರನ್ನು ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ ಪ್ರದೀಪ್ ಗೌಡ(26)ಎಂದು ಗುರುತಿಸಲಾಗಿದೆ.
ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ನಿವಾಸಿ ಜಾನಪ್ಪ ಗೌಡ ಎಂಬವರ ಪುತ್ರನಾಗಿರುವ ಇವರು ಅವಿವಾಹಿತರಾಗಿದ್ದರು. ಕಳೆದ ಕೆಲವು ಸಮಯದಿಂದ ಇವರು ಸಿದ್ದಕಟ್ಟೆ ಹಾರ್ಡ್ವೆರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ಇವರು ವಾಮದಪದವಿನಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಇವರು ಗುರುವಾರ ಮಧ್ಯಾಹ್ನ ಎಂದಿನಂತೆ ಊಟ ಮುಗಿಸಿ ವಿಶ್ರಾಂತಿಯಲ್ಲಿದ್ದ ವೇಳೆ ದಿಢೀರನೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಇವರನ್ನು ಶಿಬಿರದ ವೈದ್ಯರು ಪರೀಕ್ಷಿಸಿದ ಬಳಿಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿದ್ದಂತೆಯೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.