ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ನಗರ ಪೊಲೀಸ್ ಠಾಣೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ವತಿಯಿಂದ ಗುರುವಾರ ದೂರು ಸಲ್ಲಿಸಿದರು. ವಿಟ್ಲದಲ್ಲಿ ಈಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವುದು ಖಂಡನೀಯ. ಜಿಲ್ಲೆಯಲ್ಲಿ ಕೋಮು ವೈಷಮ್ಯ ಮೂಡಿಸಲು ಇಸ್ಲಾಂ ನಿಂದನೆಗೊಳಿಸಿದ ವ್ಯಕ್ತಿಯನ್ನು ಪೊಲೀಸರು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್ ಆಗ್ರಹಿಸಿದ್ದಾರೆ.
ಇಲ್ಲಿನ ಬಿ.ಸಿ.ರೋಡು ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಗರು ಇಂತಹ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಆದರೆ ನಾವು ಪ್ರಚೋದನೆಗೆ ಒಳಗಾಗದೆ ಜಿಲ್ಲೆಯಲ್ಲಿ ಕೋಮು ವೈಷಮ್ಯ ಹರಡಲು ಎಂದಿಗೂ ಬಿಡುವುದಿಲ್ಲ ಎಂದರು.
ವಿಟ್ಲದಲ್ಲಿ ದ್ವೇಷ ಭಾಷಣಕ್ಕೆ ಕಾರಣೀಕರ್ತರಾದ ಕಾರ್ಯಕ್ರಮ ಸಂಘಟಕರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಗತ್ತಿಗೆ ಶಾಂತಿ ಸಾರಿದ ಮಹಮ್ಮದ್ ಪೈಗಂಬರ್ ವಿರುದ್ಧವೂ ಬಿಜೆಪಿ ವಕ್ತಾರರ ಮೂಲಕ ಅವಹೇಳನಕಾರಿ ಹೇಳಿಕೆ ನೀಡಲಾಗುತ್ತಿದ್ದು, ಇದರ ಹಿಂದೆ ಬಿಜೆಪಿ ಕೆಲಸ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದರು. ಈ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಬುಲ್ಡೋಜರ್ ತರುವ ತಾಕತ್ತು ಬಿಜೆಪಿ ಮುಖಂಡ ಸಿ.ಟಿ.ರವಿಗೆ ಇದೆಯೇ ಎಂದು ಅವರು ಪ್ರಶ್ನಿಸಿದರು.
ರಾಜ್ಯ ಅಲ್ಪಸಂಖ್ಯಾತ ಘಟಕ ಸಂಯೋಜಕ ಆಲ್ಬರ್ಟ್ ಮಿನೇಜಸ್, ಪುರಸಭಾಧ್ಯಕ್ಷ ಮೊಹಮ್ಮದ್ ಶರೀಫ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅರ್ಶಾದ್ ಸರವು, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಪುರಸಭಾ ಸದಸ್ಯ ಸಿದ್ಧಿಕ್ ಗುಡ್ಡೆಯಂಗಡಿ, ಜಿಲ್ಲಾ ಅಸಂಘಟಿತ ಘಟಕ ಪ್ರಧಾನ ಕಾರ್ಯದರ್ಶಿ ನಿಯಾಝ್ ಪಜೀರ್ ಸುದ್ದಿಗೋಷ್ಠಿಯಲ್ಲಿ ಇದ್ದರು.