ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ ಉಳಿಪಾಡಿಗುತ್ತು ಚಾಲನೆ ನೀಡಿದರು. ಬಿಲ್ಲವ ಸಂಗದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಮತ್ತಿತರರು ಇದ್ದಾರೆ.

ಬ್ರಹ್ಮಶ್ರೀ ನಾರಾಯಣಗುರು ಜಗತ್ತಿಗೆ ನೀಡಿದ ಸಾರ್ವಕಾಲಿಕ ಸತ್ಯ ಸಂದೇಶವು ಸಂಘರ್ಷ ರಹಿತ ಸಮಾಜಕ್ಕೆ ಅವಶ್ಯಕವಾಗಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ಕೆ.ತುಕಾರಾಮ ಪೂಜಾರಿ ವಿಶೇಷ ಉಪನ್ಯಾಸ ನೀಡಿದರು. ಶೋಷಿತ ವರ್ಗಗಳ ಜನರಿಗೆ ಶೈಕ್ಷಣಿಕ ಮತ್ತು ಧಾರ್ಮಿಕ ಅರಿವು ಮೂಡಿಸುವ ಕಾರ್ಯದ ಜೊತೆಗೆ ಮೂಢನಂಬಿಕೆ ತೊಲಗಿಸಲು ಗುರುವರ್ಯರ ಕೊಡುಗೆ ಅಪಾರ ಎಂದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಯುವವಾಹಿನಿ ಅಧ್ಯಕ್ಷ ಗಣೇಶ್ ಪೂಂಜರಕೋಡಿ ಇದ್ದರು. ವಿಟ್ಲ ಕಂದಾಯ ನಿರೀಕ್ಷಕ ಕೆ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ನಾರಾಯಣ ಗೌಡ ವಂದಿಸಿದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.