ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಪುಂಡಿಕಾೈ ಗಣಪಯ್ಯ ಭಟ್ ಆಯ್ಕೆಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

s2

ಅಧ್ಯಕ್ಷರ ವಿವರ:
ಡಾ. ಪುಂಡಿಕಾೈ ಗಣಪಯ್ಯ ಭಟ್ ಇವರು ಬಂಟ್ವಾಳ ತಾಲೂಕಿನ ವಿಟ್ಲದ ಬಳಿಯ ಪುಂಡಿಕಾೈಯವರು. ತಮ್ಮ ಕಾಲೇಜು ವಿದ್ಯಾಭ್ಯಾಸವನ್ನು ಮಂಗಳೂರಿನ ಸೈಂಟ್ ಎಲೋಶಿಯಸ್ ಕಾಲೇಜಿನಲ್ಲಿ ಪೂರೈಸಿದ ಶ್ರೀಯುತರು 1975ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಾಚೀನ ಇತಿಹಾಸ ಮತ್ತು ಪ್ರಾಚ್ಯವಸ್ತುಶಾಸ್ತ್ರ ವಿಷಯದಲ್ಲಿ ಎಂ. ಎ. ಪದವಿಯನ್ನು ಪಡೆದರು. ನಂತರ ಪುಣೆಯ ಡೆಕ್ಕನ್ ಕಾಲೇಜು ಸಂಶೋಧನಾ ಸಂಸ್ಥೆಯಲ್ಲಿ ಮೂರು ವರ್ಷ ಕಾಲ ಸಂಶೋಧಕರಾಗಿ ಕೆಲಸ ಮಾಡಿದ ಇವರು 1979-80ರ ಅವಧಿಯಲ್ಲಿ ಭಾರತ ಸರಕಾರದ ಸಾಂಸ್ಕøತಿಕ ವಿನಿಮಯ ಯೋಜನೆಯ ಅಡಿಯಲ್ಲಿ ಗ್ರೀಸ್ ದೇಶಕ್ಕೆ ತೆರಳಿ ಒಂದುವರೆ ವರ್ಷ ಕಾಲ ಗ್ರೀಸ್ ಮತ್ತು ಇಂಗ್ಲೆಂಡ್ ದೇಶಗಳಲ್ಲಿ ಪ್ರಾಚ್ಯವಸ್ತು ಶಾಸ್ತ್ರದಲ್ಲಿ ವಿಶೇಷ ತರಬೇತಿಯನ್ನು ಪಡೆದುಕೊಂಡರು. ತುಳುನಾಡಿನ ಪ್ರಾಚೀನ ಇತಿಹಾಸ ಕುರಿತಂತೆ ಸಂಶೋಧನೆ ನಡೆಸಿ 1995ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಇವರು ಪಿಎಚ್.ಡಿ. ಪದವಿಯನ್ನು ಪಡೆದರು. 1981ರಲ್ಲಿ ಮೂಡುಬಿದಿರೆಯಲ್ಲಿ ಶ್ರೀ ಧವಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇರಿದ ಪುಂಡಿಕಾೈಯವರು ಇತಿಹಾಸ ಅಧ್ಯಾಪನ ಕ್ಷೇತ್ರದಲ್ಲಿ ಮೂರು ದಶಕಗಳ ಅನುಭವವನ್ನು ಗಳಿಸಿದ್ದಾರೆ.
ತುಳುನಾಡಿನ ಇತಿಹಾಸ, ಸಂಸ್ಕøತಿ, ವಾಸ್ತುಶಿಲ್ಪ ಮತ್ತು ಶಾಸನಗಳ ಅಧ್ಯಯನ ಡಾ. ಗಣಪಯ್ಯ ಭಟ್ ರವರ ಆಸಕ್ತಿಯ ಕ್ಷೇತ್ರಗಳು. ಈ ವಿಷಯಗಳಿಗೆ ಸಂಬಂಧಿಸಿದಂತೆ ಶ್ರೀಯುತರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಲವಾರು ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ವಿಚಾರಗೋಷ್ಠಿಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಅಲ್ಲದೆ ಇವರ ನೂರಕ್ಕೂ ಹೆಚ್ಚು ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಮತ್ತು ಸ್ಮರಣ ಸಂಚಿಕೆಗಳಲ್ಲಿ ಪ್ರಕಟಗೊಂಡಿವೆ. ಡಾ. ಪುಂಡಿಕಾೈಯವರ ‘ಯುರೋಪ್ ನೆನಪುಗಳು’ ಮತ್ತು ‘ತೌಳವ’ ಎಂಬ ಎರಡು ಕೃತಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುರಸ್ಕಾರವನ್ನೂ ಪಡೆದುಕೊಂಡಿವೆ. ಇವರ ‘ಯುರೋಪ್ ನೆನಪುಗಳು’ ಕೃತಿಯು ಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಕಲ್ಲಿಕೋಟೆ ವಿಶ್ವವಿದ್ಯಾನಿಲಯಗಳ ಪದವಿ ತರಗತಿಗಳಿಗೆ ಪಠ್ಯಪುಸ್ತಕವಾಗಿ ಅಂಗೀಕೃತವಾಗಿತ್ತು.
ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಗಳ ಇತಿಹಾಸ ಅಧ್ಯಯನ ಮಂಡಳಿಯ ಸದಸ್ಯರಾಗಿ ಮೂರು ಅವಧಿಯಲ್ಲಿ ಕಾರ್ಯನಿರ್ವಹಿಸಿದ ಡಾ. ಭಟ್‍ರವರು ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಇತಿಹಾಸ ಅಕಾಡೆಮಿ, ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಭಾರತೀಯ ಸ್ಥಳನಾಮ ಶಾಸ್ತ್ರಜ್ಞರ ಸಂಘ ಮೊದಲಾದ ಸಂಘಗಳ ಆಜೀವ ಸದಸ್ಯರು. ಇತಿಹಾಸ ಸಂಶೋಧನಾ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಇವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯಗಳು ಪಿಎಚ್.ಡಿ. ಸಂಶೋಧನಾ ಮಾರ್ಗದರ್ಶಕರಾಗಿ ಮಾನ್ಯತೆ ನೀಡಿವೆ.
ಸಾಹಿತ್ಯಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕ ಸಂಘಟನೆಗಳಲ್ಲಿ ಸಕ್ರಿಯವಾಗಿರುವ ಡಾ. ಭಟ್‍ರವರು ಮೂಡುಬಿದಿರೆಯಲ್ಲಿ ನಡೆದ 71 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿಗಳಲ್ಲೊಬ್ಬರಾಗಿ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಭಾಷಾ ಅಭಿವೃದ್ಧಿ ಯೋಜನೆಯ ಸದಸ್ಯರಾಗಿ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಸಗಟು ಖರೀದಿ ಯೋಜನೆಯ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವರ್ಧಮಾನ ಪ್ರಶಸ್ತಿ ಪೀಠದ ಉಪಾಧ್ಯಕ್ಷರು, ಮೂಡುಬಿದಿರೆಯ ಸಮಾಜಮಂದಿರ ಸಭಾದ ಆಡಳಿತ ಮಂಡಳಿಯ ಸದಸ್ಯರು, ಸಮಾಜಮಂದಿರದ ದಸರಾ ಸಾಹಿತ್ಯ ಮತ್ತು ಸಾಂಸ್ಕøತಿಕ ಉತ್ಸವದ ಸಂಚಾಲಕರು, ಆಳ್ವಾಸ್ ನುಡಿಸಿರಿಯ ಉಪಾಧ್ಯಕ್ಷರಲ್ಲೊಬ್ಬರು, ಮೂಡುಬಿದಿರೆ ರೋಟರಿ ಕ್ಲಬ್‍ನ ಸಕ್ರಿಯ ಸದಸ್ಯರು – ಹೀಗೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಡಾ. ಪುಂಡಿಕಾೈ ಗಣಪಯ್ಯ ಭಟ್‍ರವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *