ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲನೇಯ ಹಂತದ ಪಟ್ಟಿಯನ್ನು ಫೆ.17ರಂದು ಬಿಡುಗಡೆ ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಫೆ.17ರಂದು ಜೆಡಿಎಸ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಕನಿಷ್ಠ 10 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷಿಸಲಾಗಿದೆ. ಇದೇ ವೇಳೆ ರಾಷ್ಟ್ರೀಯ ಪಕ್ಷಗಳಿಗೂ ಮೊದಲು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದರು.
ಈ ಸಮಾವೇಶದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಕಾರಣಕ್ಕಾಗಿ ನಗರದ ಹೊರ ವಲಯದಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಹಾಗಾಗಿ ಸಾರ್ವಜನಿಕರೂ ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬಹುದು ಎಂದು ಅವರು ಮನವಿ ಮಾಡಿದರು.
ಮುಂದಿನ ಚುನಾವಣೆಗೆ ಜೆಡಿಎಸ್ ನ ಸಿದ್ಧತೆಗಳನ್ನು ಜನರಿಗೆ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
