ಬಂಟ್ವಾಳ:ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿ ಓದಿದ ಅದೆಷ್ಟೋ ವಿಚಾರಗಳನ್ನು ಎಂದಿಗೂ ಮರೆಯುವುದಿಲ್ಲ. ಅದೇ ರೀತಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಬರೆಯುವಲ್ಲಿ ಕೂಡಾ ಪಠ್ಯದ ಎಲ್ಲಾ ವಿಚಾರಗಳನ್ನು ಸುಸಲಿತವಾಗಿ ನೆನಪಿನಲ್ಲಿಡಲು ಪ್ರತಿ ನಿತ್ಯ ಖುಷಿಯಿಂದ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಬೆಂಗಳೂರಿನ ಯುವ ತರಬೇತುದಾರ ವಿನಯ್ ಜಾದವ್ ಹೇಳಿದ್ದಾರೆ.

ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ‘ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸುವುದು ಹೇಗೆ…?’ ಎಂಬ ಬಗ್ಗೆ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಸಂಸ್ಥೆ ಮುಖ್ಯಸ್ಥ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಇಂತಹ ತರಬೇತಿ ಮೂಲಕ ಸ್ಥಳೀಯ ಎಲ್ಲಾ ಶಾಲೆಯ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದರು.
ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ರಮಾನಂದ, ಕೊಯಿಲ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುಧೀರ್ ಜಿ., ತಾಕೊಡೆ ಆದರ್ಶ ಪ್ರೌಢಶಾಲೆ ಮುಖ್ಯಶಿಕ್ಷಕಿ ಝೀಟಾ ಡಯಾಸ್, ವಾಮದಪದವು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ರಾಘವೇಂದ್ರ ಬಲ್ಲಾಳ್, ಶಾಲಾ ಸಂಚಾಲಕ ವಿಜಯ ಕುಮಾರ್ ಚೌಟ, ಪ್ರಾಂಶುಪಾಲ ಸಂತೋಷ್ ಶೆಟ್ಟಿ ಮತ್ತಿತರರು ಇದ್ದರು.
ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೊ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮಿಫ್ಟ್ ಕಾಲೇಜಿನ ಸಂಚಾಲಕ ರಮೇಶ್ ವಂದಿಸಿದರು. ಶಿಕ್ಷಕ ರಘುನಾಥ ಕಾರ್ಯಕ್ರಮ ನಿರೂಪಿಸಿದರು.